Breaking Newsಸಚಿವರ ಕಚೇರಿಯಿಂದ

ಹೊಸಪೇಟೆ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಭೇಟಿ |
ಶಕ್ತಿ ಯೋಜನೆಯಿಂದ ಮಹಿಳಾ ಸಬಲೀಕರಣ – ಈಶ್ವರ ಖಂಡ್ರೆ

ಹೊಸಪೇಟೆ, ಸೆ.30: ಗೃಹಲಕ್ಷ್ಮೀ ಯೋಜನೆಯಡಿ ಮನೆಯೊಡತಿಗೆ 2 ಸಾವಿರ ರೂ. ಲಭಿಸುತ್ತಿದ್ದು, ಶಕ್ತಿ ಯೋಜನೆಯಡಿಯಲ್ಲಿ ಕೋಟ್ಯಂತರ ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾರೆ. ಇದು ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಹೊಸಪೇಟೆಯ ಕಾಂಗ್ರೆಸ್ ಕಚೇರಿಗಿಂದು ಭೇಟಿ ನೀಡಿ, ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ನುಡಿದಂತೆ ನಡೆಯುತ್ತಿದೆ. ಎಲ್ಲ ಗ್ಯಾರಂಟಿಗಳನ್ನೂ ಜಾರಿಗೆ ತರುತ್ತಿದೆ. ಸರ್ಕಾರದ ಮೇಲೆ ಜನರಲ್ಲಿ ವಿಶ್ವಾಸ ಹೆಚ್ಚಾಗಿದ್ದು, ಮುಂಬರುವ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತ್ತು ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ಮಾಡಿ, ಪಕ್ಷದ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು.

ಎಲ್ಲ ಜಾತಿ, ಜನಾಂಗ, ಸಮುದಾಯವನ್ನು ಸಮಾನವಾಗಿ ಕಾಣುವ ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗುವ ಏಕೈಕ ಪಕ್ಷ ಕಾಂಗ್ರೆಸ್ ಎಂದು ಹೇಳಿದ ಅವರು, ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕ ಶಾಂತಿ, ನೆಮ್ಮದಿಯಿಂದ ಮುನ್ನಡೆಯಲು ಕಾಂಗ್ರೆಸ್ ಗೆ ಬೆಂಬಲಿಸುವಂತೆ ತಿಳಿಸಿದರು.ಶಾಸಕ ಗವಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button