Breaking Newsಕರ್ನಾಟಕ ರಾಜಕೀಯ

ಒಂದೆಡೆ ರೈತರಿಗೆ ವಿದ್ಯುತ್ ಆಘಾತ; ಇನ್ನೊಂದೆಡೆ ಕಾವೇರಿ ಬವಣೆ |ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ ಎನ್ನುವ ಎದೆಗಾರಿಕೆ ಸರಕಾರಕ್ಕೆ ಇಲ್ಲ : ಹೆಚ್ ಡಿ ಕುಮಾರಸ್ವಾಮಿ ಕಿಡಿ


ಬೆಂಗಳೂರು: ತಮಿಳುನಾಡಿಗೆ ಮತ್ತೆ ಮುಂದಿನ 15 ದಿನಗಳ ಕಾಲ ನಿತ್ಯ 3000 ಕ್ಯೂಸೆಕ್ ನೀರು ಹರಿಸಲು ಕಾವೇರಿ ಜಲ ನಿಯಂತ್ರಣ ಸಮಿತಿ ರಾಜ್ಯಕ್ಕೆ ಆದೇಶ ನೀಡಿರುವ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ಇನ್ನೊಂದು ದೊಡ್ಡ ಆಘಾತ. ಇಂಥ ಜಲಾಘಾತಗಳನ್ನು ಕೊಡುವುದಕ್ಕೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಿಕೊಂಡಿದ್ದಾರೆಯೇ ಎನ್ನುವ ಅನುಮಾನ ನಮ್ಮದು ಎಂದು ಅವರು ಹೇಳಿದ್ದಾರೆ.

ಈ ಆದೇಶಗಳು ಸಂವಿಧಾನ ಹಾಗೂ ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲ, ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ. ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ. ಬೆಂಗಳೂರು ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಕಾವೇರಿ ಕೊಳ್ಳದ ರೈತರ ಒಂದು ಬೆಳೆಗೂ ಸಮರ್ಪಕವಾಗಿ ನೀರು ಹರಿದಿಲ್ಲ. ಹೀಗಿದ್ದರೂ ರಾಜ್ಯಕ್ಕೆ ಆದೇಶದ ಮೇಲೆ ಆದೇಶ ನೀಡಿ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಿಗರೂ ಮನುಷ್ಯರು, ಅವರಿಗೂ ಅನ್ನ ನೀರು ಬೇಕು. ಅವರೂ ಈ ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದನ್ನು ಸಮಿತಿ ಮರೆತಿರುವಂತಿದೆ. ಸರಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಿಲ್ಲ. ಈ ಆದೇಶವನ್ನು ದಿಕ್ಕರಿಸುವ ಎದೆಗಾರಿಕೆ ಸರಕಾರಕ್ಕೆ ಇಲ್ಲ. ಜನರು ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು, ಜನರ ಜತೆ ನಾವಿದ್ದೇವೆ, ನಮ್ಮ ಪಕ್ಷವೂ ಇದೆ ಎಂದು ಅವರು ಹೇಳಿದ್ದಾರೆ.

ಒಂದು ಕಡೆ ವಿದ್ಯುತ್ ಆಘಾತದಿಂದ ರೈತರು ಕಂಗೆಟ್ಟಿದ್ದಾರೆ. ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ಕಾವೇರಿ ಹರಿಯಲಿ ಎನ್ನುವ ಮನಸ್ಥಿತಿಯಲ್ಲಿ ರಾಜ್ಯ ಕಾಂಗ್ರೆಸ್
ಸರಕಾರ ಇದೆ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

Back to top button